Psalms - Chapter 34
Holy Bible

1 : ಪ್ರಭುವನು ನಾ ಕೊಂಡಾಡುವೆ ಎಲ್ಲ ಕಾಲದೊಳು / ಆತನ ಸ್ತುತಿ ಸದಾ ಇಹುದು ನನ್ನ ಬಾಯೊಳು //
2 : ಪ್ರಭುವಿನಲ್ಲಿದೆ ನನ್ನ ಮನದಭಿಮಾನ / ದೀನರಿದನು ಕೇಳಿ, ಪಡೆಯಲಿ ಸುಮ್ಮಾನ //
3 : ಬನ್ನಿ, ಕೊಂಡಾಡುವ ಪ್ರಭು ದೇವನನು / ಘನಪಡಿಸೋಣ ಅವನ ಶ್ರೀನಾಮವನು //
4 : ಬೇಡಿಕೊಳ್ಳಲು ಕೊಟ್ಟನಾತ ಸದುತ್ತರವನು / ಭಯಭೀತಿಯಿಂದೆನ್ನನು ಮುಕ್ತ ನಾಗಿಸಿಹನು //
5 : ಆತನತ್ತ ತಿರುಗಿದ ಮುಖ ಅರಳುವುದು / ಲಜ್ಜೆಯಿಂದೆಂದಿಗು ಕುಂದಿಹೋಗದು //
6 : ನಿರ್ಗತಿಕನು ಮೊರೆಯಿಡಲು ಪ್ರಭು ಕಿವಿಗೊಟ್ಟನು / ಸರ್ವಾಪತ್ತಿನಿಂದವನು ಮುಕ್ತಗೊಂಡನು //
7 : ಭಯಭಕುತಿಯುಳ್ಳವರ ಸುತ್ತಲು ಕಾವಲಿದ್ದು / ಕಾಯುವನು ಪ್ರಭುವಿನ ದೂತನೆ ಬಂದಿಳಿದು //
8 : ಸವಿದು ನೋಡು ಪ್ರಭುವಿನ ಮಾಧುರ್ಯವನು / ಆತನನು ಆಶ್ರಯಿಸಿಕೊಂಡವನು ಧನ್ಯನು //
9 : ದೇವಜನರೆ, ನಿಮಗಿರಲಿ ಪ್ರಭುವಿನ ಭಯಭಕುತಿ / ಅಂಥವರಿಗಿರದು ಯಾವ ಕುಂದುಕೊರತೆಯ ಭೀತಿ //
10 : ಯುವ ಕೇಸರಿಗೆ ಇರಬಹುದು ಹಸಿವು, ದಾಹ / ಪ್ರಭುವನು ಅರಸುವವರಿಗಿರದು ಒಳಿತಿನ ಅಭಾವ //
11 : ಬನ್ನಿ ಮಿತ್ರರೇ, ಆಲಿಸಿರೀ ಮಾತನು / ಕಲಿಸುವೆನು ನಾ ನಿಮಗೆ ದೇವ ಭಯವನು //
12 : ಎಲೈಮಾನವ, ಬಲುದಿನ ಬಾಳಲು ಬಯಸುವೆಯಾ? / ಆಯುರಾರೋಗ್ಯ ಭಾಗ್ಯವನು ಆಶಿಸುವೆಯಾ?//
13 : ಕಾದಿಡು ನಾಲಿಗೆಯನು ಕೇಡನು ಆಡದಂತೆ / ಬಿಗಿಯಿಡು ತುಟಿಯನ್ನು ಕುಟಿಲವನು ನುಡಿಯದಂತೆ //
14 : ಬಿಡು ಕೆಟ್ಟದನು, ಮಾಡು ಒಳಿತನು / ಹುಡುಕು ಶಾಂತಿಯನು, ಬೆನ್ನಟ್ಟು ಅದನು //
15 : ಸಜ್ಜನರನು ಪ್ರಭು ಕಟಾಕ್ಷಿಸುವನು / ಅವರ ಮೊರೆಗಾತ ಕಿವಿಗೊಡುವನು //
16 : ದುರ್ಜನರಿಗಾದರೋ ಪ್ರಭು ವಿಮುಖನು / ಅವರ ಹೆಸರನು ಧರೆಯಿಂದ ಅಳಿಸುವನು //
17 : ಕಿವಿಗೊಡುವನು ಪ್ರಭು ಸಜ್ಜನರ ಮೊರೆಗೆ / ನೆರವೀವನವರ ಕಷ್ಟನಿವಾರಣೆಗೆ //
18 : ಸನಿಹದಲ್ಲಿಹನು ಪ್ರಭು ಭಗ್ನ ಹೃದಯಿಗಳಿಗೆ / ಉದ್ಧಾರಕನಾತನು ಮನಸ್ಸು ಕುಗ್ಗಿದವರಿಗೆ //
19 : ಸಜ್ಜನನಿಗೊದಗುವ ಸಂಕಟಗಳು ವಿಪರೀತ / ಪ್ರಭುವೆಲ್ಲವನು ನಿವಾರಿಸುವುದು ನಿಶ್ಚಿತ //
20 : ಕಾಪಾಡುವನು ಅವನೆಲಬುಗಳೆಲ್ಲವನ್ನೂ / ಮುರಿಯಬಿಡನು ಪ್ರಭು ಅವುಗಳ ಲ್ಲೊಂದನ್ನೂ //
21 : ದುರ್ಜನರೆಲ್ಲರೂ ತುತ್ತಾಗುವರು ತಮ್ಮ ಕೇಡಿಗೆ / ಸಜ್ಜನರ ಶತ್ರುಗಳು ಗುರಿಯಾಗುವರು ದಂಡನೆಗೆ //
22 : ತನ್ನ ದಾಸರನು ಉದ್ಧಾರಮಾಡದಿರನು ಪ್ರಭು / ತನ್ನ ಶರಣರೊಳೊಬ್ಬರನು ದಂಡಿಸನಾ ವಿಭು //

Holydivine