Psalms - Chapter 96
Holy Bible

1 : ಹೊಸಗೀತೆಯನು ಹಾಡಿರಿ ಪ್ರಭುವಿಗೆ / ವಿಶ್ವವೆಲ್ಲವು ಹಾಡಲಿ ಆತನಿಗೆ //
2 : ಪ್ರಭುವಿಗೆ ಹಾಡಿರಿ, ಆತನ ನಾಮವನು ಕೊಂಡಾಡಿರಿ / ಆತನ ಮುಕ್ತಿಮಾರ್ಗವನು ಪ್ರತಿನಿತ್ಯವೂ ಸಾರಿರಿ //
3 : ಪ್ರಸಿದ್ಧಪಡಿಸಿರಿ ಆತನ ಘನತೆಯನು ರಾಷ್ಟ್ರಗಳಿಗೆ | ಆತನದ್ಭುತ ಕಾರ್ಯಗಳನು ಸಕಲ ಜನಾಂಗಗಳಿಗೆ ||
4 : ಏಕೆನೆ ಮಹಾತ್ಮನು ಪ್ರಭು, ಬಲು ಸ್ತುತ್ಯರ್ಹನು | ಸಕಲ ದೇವರುಗಳಿಗಿಂತಲೂ ಘನ ಗಂಭೀರನು ||
5 : ಶೂನ್ಯ ಪ್ರತಿಮೆಗಳು ಅನ್ಯರಾಷ್ಟ್ರಗಳ ದೇವರುಗಳೆಲ್ಲ | ಪ್ರಭುವಿನಿಂದಲೇ ಉಂಟಾಯಿತು ಆಕಾಶ ಮಂಡಲವೆಲ್ಲ ||
6 : ಇವೆ ಮಹಿಮೆ, ಮಹತ್ವ, ಆತನ ಸನ್ನಿಧಿಯಲಿ | ಶಕ್ತಿಸೌಂದರ್ಯ ಆತನ ಗರ್ಭಗುಡಿಯಲಿ ||
7 : ಶಕ್ತಿಸಾಮಥ್ರ್ಯ ಪ್ರಭುವಿನದೇ ಎಂದು | ಜಗದ ರಾಷ್ಟ್ರಗಳು ಘನಪಡಿಸಲಿ ಆತನನು ಎಂದೆಂದು ||
8 : ಆತನ ನಾಮಕೆ ತನ್ನಿ ಘನತೆಗೌರವವನು | ಆತನ ಮಂದಿರಕೆ ಬನ್ನಿ ಕಾಣಿಕೆ ಹೊತ್ತು ||
9 : ಪ್ರಭುವಿಗೆ ಮಣಿಯಿರಿ ಪವಿತ್ರ ವಸ್ತ್ರಧಾರಿಗಳಂತೆ | ಅಂಜಿಕೆಯಿಂದ ನಡುಗಲಿ ಜಗವಿಡೀ ಆತನ ಮುಂದೆ ||
10 : ಪ್ರಭು ರಾಜನೆಂದು ಸಾರಿರಿ ರಾಷ್ಟ್ರಗಳಿಗೆ | ಕದಲದ ಸ್ಥಿರತೆಯನು ಇತ್ತಿಹನು ಧರೆಗೆ | ನ್ಯಾಯವಾದ ತೀರ್ಪು ಕೊಡುವನು ಜನಾಂಗಕೆ ||
11 : ಹರ್ಷಿಸಲಿ ಆಕಾಶವು, ಸಂತೋಷಿಸಲಿ ಭೂಲೋಕವು | ಗರ್ಜಿಸಲಿ ಸಮುದ್ರವು ಮತ್ತು ಅದರೊಳಿರುವುದೆಲ್ಲವು ||
12 : ಉಲ್ಲಾಸಿಸಲಿ ಹೊಲಗದ್ದೆಗಳು, ಪೈರುಪಚ್ಚೆಗಳು | ಹರ್ಷಧ್ವನಿಗೈಯಲಿ ಕಾಡಿನ ಫಲವೃಕ್ಷಗಳು ||
13 : ಪ್ರಭು ಧರೆಗೆ ನ್ಯಾಯತೀರಿಸಲು ಬಂದೇ ಬರುವನು ಖರೆಯಾಗಿ | ಜಗಕು, ಜನತೆಗು ತೀರ್ಪಿಸುವನು ನೀತಿನಿಯಮಾನುಸಾರವಾಗಿ ||

Holydivine