Luke - Chapter 17
1 : ಯೇಸುಸ್ವಾಮಿ ತಮ್ಮ ಶಿಷ್ಯರನ್ನು ಉದ್ದೇಶಿಸಿ, “ಪಾಪಪ್ರಚೋದನೆಗಳು ಬಂದೇ ಬರುತ್ತವೆ. ಆದರೆ ಅವು ಯಾರಿಂದ ಬರುತ್ತವೋ ಅವನಿಗೆ ಧಿಕ್ಕಾರ!
2 : ಅಂಥವನು ಈ ಚಿಕ್ಕವರಲ್ಲಿ ಒಬ್ಬನಿಗೆ ಪಾಪಕ್ಕೆ ಕಾರಣನಾಗುವುದಕ್ಕಿಂತ, ಬೀಸುವ ಕಲ್ಲನ್ನು ಕುತ್ತಿಗೆಗೆ ಬಿಗಿಸಿಕೊಂಡು ಸಮುದ್ರದಲ್ಲಿ ದಬ್ಬಿಸಿಕೊಳ್ಳುವುದೇ ಲೇಸು.
3 : ನೀವಾದರೋ ಎಚ್ಚರಿಕೆಯಿಂದಿರಿ! “ನಿನ್ನ ಸಹೋದರನು ತಪ್ಪುಮಾಡಿದರೆ ಅವನನ್ನು ಖಂಡಿಸು; ಪಶ್ಚಾತ್ತಾಪಪಟ್ಟರೆ ಕ್ಷಮಿಸಿಬಿಡು.
4 : ಅವನು ದಿನಕ್ಕೆ ಏಳುಸಾರಿ ನಿನಗೆ ವಿರುದ್ಧ ತಪ್ಪುಮಾಡಿ ಪ್ರತಿಯೊಂದು ಸಾರಿಯೂ ಪಶ್ಚಾತ್ತಾಪಪಟ್ಟು ನಿನ್ನ ಬಳಿಗೆ ಬಂದು, ‘ಕ್ಷಮಿಸು,’ ಎಂದು ಕೇಳಿಕೊಂಡರೆ ನೀನು ಅವನನ್ನು ಕ್ಷಮಿಸಲೇಬೇಕು,” ಎಂದರು. ಸಶಕ್ತ ವಿಶ್ವಾಸ
5 : “ಸ್ವಾವಿೂ, ನಮ್ಮ ವಿಶ್ವಾಸವನ್ನು ಹೆಚ್ಚಿಸಿರಿ,” ಎಂದು ಪ್ರೇಷಿತರು ಕೇಳಿಕೊಂಡರು.
6 : ಆಗ ಯೇಸುಸ್ವಾಮಿ, “ಸಾಸಿವೆ ಕಾಳಿನಷ್ಟು ವಿಶ್ವಾಸ ನಿಮ್ಮಲ್ಲಿದ್ದು, ನೀವು ಈ ಅತ್ತಿಮರಕ್ಕೆ, ‘ನೀನು ಬೇರುಸಹಿತ ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ನಾಟಿಕೊ,’ ಎಂದು ಆಜ್ಞಾಪಿಸಿದ್ದೇ ಆದರೆ ಅದು ನಿಮಗೆ ವಿಧೇಯವಾಗಿ ನಡೆದುಕೊಳ್ಳುವುದು. ಮಾನವರು ದೇವರ ಊಳಿಗದವರು
7 : “ನಿಮಗೆ ಒಬ್ಬ ಆಳಿದ್ದಾನೆಂದು ಭಾವಿಸೋಣ. ಅವನು ಹೊಲ ಉತ್ತೋ, ಕುರಿ ಮೇಯಿಸಿಯೋ ಮನೆಗೆ ಬರುತ್ತಾನೆ. ಬಂದಾಕ್ಷಣವೇ, ‘ಬಾ, ನನ್ನೊಂದಿಗೆ ಊಟಮಾಡು,’ ಎಂದು ನಿಮ್ಮಲ್ಲಿ ಯಾರಾದರೂ ಅವನಿಗೆ ಹೇಳುತ್ತಾರೆಯೇ? ಇಲ್ಲ.
8 : ಅದಕ್ಕೆ ಬದಲಾಗಿ ‘ಊಟ ಸಿದ್ಧಮಾಡು; ನಾನು ಊಟಮಾಡಿ ಮುಗಿಸುವ ತನಕ ನಡುಕಟ್ಟಿಕೊಂಡು ನನಗೆ ಉಪಚಾರ ಮಾಡು. ಅನಂತರ ನೀನು ಊಟ ಮಾಡುವೆಯಂತೆ,’ ಎಂದು ಹೇಳುತ್ತಾರಲ್ಲವೇ?
9 : ತಮ್ಮ ಆಜ್ಞೆಯ ಪ್ರಕಾರ ನಡೆದುಕೊಂಡ ಆಳಿಗೆ ಅವರು ಕೃತಜ್ಞತೆ ಸಲ್ಲಿಸುತ್ತಾರೆಯೇ? ಇಲ್ಲ.
10 : ಹಾಗೆಯೇ ನೀವು ಸಹ. ನಿಮಗೆ ವಿಧಿಸಿದ್ದನ್ನು ಮಾಡಿ ಮುಗಿಸಿದ ನಂತರ, ‘ನಾವು ಕೇವಲ ಆಳುಗಳು; ನಮ್ಮ ಕರ್ತವ್ಯವನ್ನು ನಾವು ಮಾಡಿದ್ದೇವೆ,’ ಎಂದುಕೊಳ್ಳಿರಿ,” ಎಂದರು.
11 : ಯೇಸುಸ್ವಾಮಿ ಜೆರುಸಲೇಮಿಗೆ ಪ್ರಯಾಣ ಮಾಡುತ್ತಾ ಸಮಾರಿಯ ಹಾಗೂ ಗಲಿಲೇಯ ಗಡಿಗಳ ನಡುವೆ ಹಾದುಹೋಗುತ್ತಿದ್ದರು.
12 : ಒಂದು ಗ್ರಾಮವನ್ನು ಸಮೀಪಿಸಿದಾಗ ಕುಷ್ಠರೋಗದಿಂದ ನರಳುತ್ತಿದ್ದ ಹತ್ತು ಮಂದಿ ಅವರಿಗೆ ಎದುರಾಗಿ ಬಂದರು. ದೂರದಲ್ಲೇ ನಿಂತು,
13 : ‘ಯೇಸುವೇ, ಗುರುವೇ, ನಮ್ಮ ಮೇಲೆ ಕರುಣೆಯಿಡಿ,’ ಎಂದು ಕೂಗಿ ಕೇಳಿಕೊಂಡರು.
14 : ಯೇಸು ಅವರನ್ನು ನೋಡಿ, “ನೀವು ಯಾಜಕರ ಬಳಿಗೆ ಹೋಗಿರಿ. ಅವರು ನಿಮ್ಮನ್ನು ಪರೀಕ್ಷಿಸಲಿ,” ಎಂದರು. ಅಂತೆಯೇ, ಅವರು ದಾರಿಯಲ್ಲಿ ಹೋಗುತ್ತಿರುವಾಗಲೇ ಗುಣಹೊಂದಿದರು.
15 : ಅವರಲ್ಲಿ ಒಬ್ಬನು ತಾನು ಗುಣಹೊಂದಿದ್ದನ್ನು ಕಂಡು, ಹರ್ಷೋದ್ಗಾರದಿಂದ ದೇವರನ್ನು ಸ್ತುತಿಸುತ್ತಾ ಹಿಂದಿರುಗಿ ಬಂದನು.
16 : ಯೇಸುವಿನ ಪಾದಕ್ಕೆ ಸಾಷ್ಟಾಂಗವೆರಗಿ ಕೃತಜ್ಞತೆಯನ್ನು ಸಲ್ಲಿಸಿದನು. ಇವನೋ ಸಮಾರಿಯದವನು!
17 : ಆಗ ಯೇಸು, “ಹತ್ತುಮಂದಿ ಗುಣ ಹೊಂದಿದರಲ್ಲವೆ? ಮಿಕ್ಕ ಒಂಭತ್ತು ಮಂದಿ ಎಲ್ಲಿ?
18 : ದೇವರನ್ನು ಸ್ತುತಿಸುವುದಕ್ಕೆ ಈ ಹೊರನಾಡಿನವನ ಹೊರತು ಬೇರಾರೂ ಬರಲಿಲ್ಲವೇ?” ಎಂದರು.
19 : ಅನಂತರ ಆ ಸಮಾರಿಯದವನಿಗೆ, “ಎದ್ದು ಹೋಗು; ನಿನ್ನ ವಿಶ್ವಾಸವೇ ನಿನ್ನನ್ನು ಸ್ವಸ್ಥಪಡಿಸಿದೆ,” ಎಂದು ಹೇಳಿದರು. ದೇವರ ಸಾಮ್ರಾಜ್ಯದ ಭವ್ಯ ಆಗಮನ (ಮತ್ತಾ. 24.22-28, 37-41)
20 : ದೇವರ ಸಾಮ್ರಾಜ್ಯವು ಯಾವಾಗ ಬರುವುದೆಂದು ಫರಿಸಾಯರು ಕೇಳಿದಾಗ ಯೇಸುಸ್ವಾಮಿ ಪ್ರತ್ತುತ್ತರವಾಗಿ, “ದೇವರ ಸಾಮ್ರಾಜ್ಯವು ಕಣ್ಣುಗಳಿಗೆ ಕಾಣಿಸುವಂತೆ ಬರುವುದಿಲ್ಲ.
21 : ‘ಇಗೋ, ಅದು ಇಲ್ಲಿದೆ ಅಥವಾ ಅಲ್ಲಿದೆ,’ ಎಂದು ಹೇಳುವಂತಿಲ್ಲ. ಏಕೆಂದರೆ, ದೇವರ ಸಾಮ್ರಾಜ್ಯವು ನಿಮ್ಮೊಳಗೇ ಇದೆ,” ಎಂದರು.
22 : ಅನಂತರ ಶಿಷ್ಯರನ್ನು ಉದ್ದೇಶಿಸಿ, “ಕಾಲ ಒಂದು ಬರುವುದು, ಆಗ ನರಪುತ್ರನೊಂದಿಗೆ ಒಂದು ದಿನವನ್ನಾದರೂ ಕಳೆಯಲು ಹಂಬಲಿಸುವಿರಿ. ಆದರೆ ನಿಮಗದು ಲಭಿಸದು.
23 : ‘ಇಗೋ, ಇಲ್ಲಿದ್ದಾನೆ; ಅಗೋ ಅಲ್ಲಿದ್ದಾನೆ,’ ಎಂದು ಜನರು ಸುದ್ದಿ ಎಬ್ಬಿಸುವರು. ಅದನ್ನು ನೀವು ನೋಡಲು ಹೋಗಬೇಡಿ; ಅಂಥವರನ್ನು ಹಿಂಬಾಲಿಸಲೂ ಬೇಡಿ.
24 : ಆಕಾಶದ ಒಂದು ದಿಕ್ಕಿನಿಂದ ಇನ್ನೊಂದು ದಿಕ್ಕಿನವರೆಗೆ ಮಿನುಗಿ ಹೊಳೆಯುವ ಮಿಂಚಿನಂತೆ ನರಪುತ್ರನು ತಾನು ಬರುವ ಕಾಲದಲ್ಲಿ ಕಾಣಿಸಿಕೊಳ್ಳುವನು.
25 : ಆದರೆ ಅದಕ್ಕೆ ಮೊದಲು ಆತನು ತೀವ್ರ ಯಾತನೆಯನ್ನು ಅನುಭವಿಸಿ ಈ ಪೀಳಿಗೆಯಿಂದ ತಿರಸ್ಕøತನಾಗಬೇಕು.
26 : ನೋವನ ಕಾಲದಲ್ಲಿ ನಡೆದಂತೆಯೇ ನರಪುತ್ರನು ಬರುವ ಕಾಲದಲ್ಲೂ ನಡೆಯುವುದು.
27 : ನೋವನು ನಾವೆಯನ್ನು ಹತ್ತುವ ದಿನದ ತನಕ ಜನರು ತಿನ್ನುತ್ತಾ ಕುಡಿಯುತ್ತಾ ಇದ್ದರು; ಮದುವೆ ಮಾಡಿಕೊಳ್ಳುತ್ತಾ, ಮಾಡಿಕೊಡುತ್ತಾ ಇದ್ದರು; ಜಲಪ್ರಳಯ ಬಂದು ಎಲ್ಲರನ್ನು ನಾಶಮಾಡಿತು.
28 : ಅಂತೆಯೇ, ಲೋತನ ಕಾಲದಲ್ಲೂ ನಡೆಯಿತು. ಜನರು ಅನ್ನಪಾನೀಯಗಳಲ್ಲಿ ಆಸಕ್ತರಾಗಿದ್ದರು; ಲೇವಾದೇವಿಯಲ್ಲಿ ತೊಡಗಿದ್ದರು. ನೆಡುವುದರಲ್ಲೂ ನಿರ್ಮಿಸುವುದರಲ್ಲೂ ನಿರತರಾಗಿದ್ದರು.
29 : ಲೋತನು ಸೊದೋಮ್ ಊರನ್ನು ಬಿಟ್ಟು ತೆರಳಿದ ದಿನದಂದೇ ಆಕಾಶದಿಂದ ಅಗ್ನಿ ಮತ್ತು ಗಂಧಕದ ಮಳೆ ಸುರಿದು ಎಲ್ಲರನ್ನು ನಾಶಮಾಡಿತು.
30 : ನರಪುತ್ರನು ಪ್ರತ್ಯಕ್ಷನಾಗುವ ದಿನದಲ್ಲೂ ಹಾಗೆಯೇ ನಡೆಯುವುದು.
31 : “ಆ ದಿನದಲ್ಲಿ ಮಾಳಿಗೆಯ ಮೇಲಿರುವವನು ಮನೆಯಲ್ಲಿರುವ ಸರಕುಸಾಮಗ್ರಿಗಳನ್ನು ತೆಗೆದುಕೊಳ್ಳಲು ಕೆಳಗಿಳಿಯದಿರಲಿ. ಅಂತೆಯೇ, ಹೊಲದಲ್ಲಿರುವವನು ಮನೆಗೆ ಹಿಂದಿರುಗದಿರಲಿ.
32 : ಲೋತನ ಪತ್ನಿಗಾದ ಗತಿಯನ್ನು ನೆನಪಿಗೆ ತಂದುಕೊಳ್ಳಿರಿ!
33 : “ಯಾರು ತನ್ನ ಪ್ರಾಣವನ್ನು ಉಳಿಸಿಕೊಳ್ಳಲು ಇಚ್ಛಿಸುತ್ತಾನೋ ಅವನು ಅದನ್ನು ಕಳೆದುಕೊಳ್ಳುತ್ತಾನೆ; ಯಾರು ತನ್ನ ಪ್ರಾಣವನ್ನು ಕಳೆದುಕೊಳ್ಳುತ್ತಾನೋ ಅವನು ಅದನ್ನು ರಕ್ಷಿಸಿಕೊಳ್ಳುತ್ತಾನೆ.
34 : ಆ ರಾತ್ರಿ ಒಂದೇ ಹಾಸಿಗೆಯಲ್ಲಿ ಇಬ್ಬರು ಮಲಗಿದ್ದರೆ, ಆ ಇಬ್ಬರಲ್ಲಿ ಒಬ್ಬನನ್ನು ತೆಗೆದುಕೊಂಡು ಹೋಗಲಾಗುವುದು; ಒಬ್ಬನನ್ನು ಬಿಡಲಾಗುವುದು.
35 : ಒಂದೇ ಕಲ್ಲಲ್ಲಿ ಬೀಸುತ್ತಿರುವ ಇಬ್ಬರು ಮಹಿಳೆಯರಲ್ಲಿ, ಒಬ್ಬಳನ್ನು ತೆಗೆದುಕೊಂಡು ಹೋಗಲಾಗುವುದು, ಇನ್ನೊಬ್ಬಳನ್ನು ಬಿಡಲಾಗುವುದು.
36 : (ಹೊಲದಲ್ಲಿದ್ದ ಇಬ್ಬರಲ್ಲಿ, ಒಬ್ಬನನ್ನು ತೆಗೆದುಕೊಂಡು ಹೋಗಲಾಗುವುದು, ಮತ್ತೊಬ್ಬನನ್ನು ಬಿಡಲಾಗುವುದು)” ಎಂದರು.
37 : “ಸ್ವಾವಿೂ, ಇದು ಎಲ್ಲಿ ನಡೆಯುವುದು?” ಎಂದು ಶಿಷ್ಯರು ಕೇಳಿದಾಗ, ಯೇಸು, “ಹೆಣವಿದ್ದಲ್ಲಿ ರಣಹದ್ದುಗಳು ಬಂದು ಕೂಡುವುವು,” ಎಂದರು.